ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿ.11ರಂದು ಒಪ್ಪಿಗೆ ನೀಡಿದ್ದು, ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಹಾಗೂ ರಕ್ಷಣೆ ಕಾಯಿದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಲಾಗಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕಾಯಿದೆಯನ್ನು ಉಲ್ಲಂಘಿಸಿ 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.