ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಜು.1ರಂದು ಜರಗಿತು.
ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿವಿಧ ಸಾಂಸ್ಕೃತಿಕ, ಸಾಹಿತ್ಯಕ, ಕ್ರೀಡಾ ಹಾಗೂ ಶೈಕ್ಷಣಿಕವಾಗಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಪ್ರಸ್ತುತ ಬೆಂಗಳೂರಿನಲ್ಲಿ ಕಮರ್ಷಿಯಲ್ ಟ್ಯಾಕ್ಸ್ ವಿಭಾಗದ ಅಸಿಸ್ಟೆಂಟ್ ಕಮಿಷನರ್ ಆಗಿರುವ ಸೌಮ್ಯ ಬಾಪಟ್ ಅವರು ಭಾಗವಹಿಸಿ ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅಭಿವ್ಯಕ್ತಿಗೊಳಿಸಲು ಸೂಕ್ತ ವೇದಿಕೆಯನ್ನು ಕಂಡುಕೊಂಡು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಹಾಗೂ ಉಜಿರೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಇರುವ ವಿಪುಲ ಅವಕಾಶಗಳ ಬಗ್ಗೆ ಕೂಲಂಕುಶವಾಗಿ ವಿವರಿಸಿದರು. ಡಾ.ಮಹೇಶ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕು. ರಾಜೇಶ್ವರಿ ನೆಜಿಕಾರ್ ವಂದಿಸಿದರು.