ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೆ ಕಳೆದೆರಡು ದಿನಗಳ ಹಿಂದೆ ಹಸುಗೂಸು ಸಾವನ್ನಪ್ಪಿದೆ ಎಂಬ ಆರೋಪದ ವಿಚಾರಣೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ಅವರು ಆ.10 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ಮಗುವಿನ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡ ಜಿಲ್ಲಾ ಆರೋಗ್ಯಾಧಿಕಾರಿಯವರು ಆಯ್ಕೆಯಲ್ಲಿರುವ ಮಗು ದಾಖಲಾದ ಬಗೆಗಿನ ದಾಖಲೆಗಳನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮಗುವಿನ ವಿಳಂಬವಾದ ಬಗ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮನೆಯವರ ಹೇಳಿಕೆ ಹಾಗೂ ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲಿಸುತ್ತೇವೆ. ಯಾವುದಾದರೂ ರೀತಿಯಲ್ಲಿ ವಿಳಂಬವಾಗಿರುವುದು ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಸ್ಪತ್ರೆಯ ಮಕ್ಕಳ ತಜ್ಞರು ಎರಡು ಬಾರಿ ಬಂದು ಮಗುವನ್ನು ಪರೀಕ್ಷಿಸಿದ್ದಾರೆ ಎಂದು ತಿಳಿಸಿದ ಅವರು ನ್ಯುಮೋನಿಯಾದೊಂದಿಗೆ ಮಗು ಬಂದಿದೆ. ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂಬ ಮಾಹಿತಿ ಇದೆ ಎಂದರು.
ಸರಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಕ್ಲಿನಿಕ್ ನಡೆಸಿಕೊಂಡು ಆಸ್ಪತ್ರೆಯಲ್ಲಿ ಬರುವ ರೋಗಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಸಾರ್ವಜನಿಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪರಿಶೀಲಿಸಲಾಗುವುದು ಎಂದರು.
ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಗುವಿನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.