ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಟಿ. ಕೃಷ್ಣಮೂರ್ತಿಯವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲೆಯ ಬಗ್ಗೆ ಉತ್ತಮ ಭಾವನೆಗಳನ್ನು ಹೊಂದುವಂತೆ ಸಹಕರಿಸಬೇಕು, ಅದು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಬಲ್ಲದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಸಭೆಯ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ರವರು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗೆ ಬೇಕಾಗುವ ಸವಲತ್ತುಗಳನ್ನು ಶಾಲೆಯಲ್ಲಿ ಒದಗಿಸಲಾಗುವುದು ಎಂದು ಹೇಳಿದರು. ಅತಿಥಿಗಳಾಗಿ ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ, ಬೆಳ್ತಂಗಡಿ ಹಾಗೂ ಸಂಸ್ಥೆಯ ಆಡಳಿತಾಧಿಕಾರಿಯಾದ ಪ್ರಸಾದ್ ಕುಮಾರ್ 2022-23ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಉಷಾ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಲಕ್ಷ್ಮೀನಾರಾಯಣ ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಕಳೆದ ಶೈಕ್ಷಣಿಕ ವರ್ಷದಲ್ಲಿ ವಾಣಿ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಮೊಹನಾಂಗಿ ಶಿಕ್ಷಕ-ರಕ್ಷಕ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ವಂದಿಸಿದರು ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ನಿರೂಪಿಸಿದರು. ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.