ಬೆಳ್ತಂಗಡಿ : ಸಹಕಾರ ರಂಗದಲ್ಲೇ ಉನ್ನತವಾದ ‘ಸಹಕಾರ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಹಿರಿಯ ಸಹಕಾರಿಗಳು ಪಾತ್ರರಾಗಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟು ಆಯ್ಕೆಯಾಗಿದ್ದಾರೆ.
ನ. 20 ರಂದು ವಿಜಯಪುರದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ ಪಡೆಯುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿಯಾಗಿರುವ ನಿರಂಜನ ಬಾವಂತಬೆಟ್ಟು ಅವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಅವರು ಕಣಿಯೂರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸುಮಾರು 38 ವರ್ಷಗಳಿಂದ ಅಧ್ಯಕ್ಷರಾಗಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಸುಮಾರು 8 ಅವಧಿಯಲ್ಲಿ ಇವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಇವರು ನಿರ್ದೇಶಕರಾಗಿದ್ದು, ಮೂರು ಅವಧಿಗೆ ಅಧ್ಯಕ್ಷರಾಗಿದ್ದು, ಕಳೆದ ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ ಸುಧೀರ್ಘ ಅವಧಿಯಿಂದ ಸೇವೆ ಸಲ್ಲಿಸುತ್ತಿರುವ ನಿರಂಜನ್ ಬಾವಂತಬೆಟ್ಟು ಅವರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅವರು ಸುಧೀರ್ಘ ಅವಧಿಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರಿಗೆ ‘ಸಹಕಾರ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತದೆ.