ಅಳದಂಗಡಿ: ಉಜಿರೆ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಅಳದಂಗಡಿ ಇದರ ಸಹಯೋಗದೊಂದಿಗೆ ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹದಿಹರೆಯ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ರಮ್ಯ ಬಿ., ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹದಿಹರೆಯದವರು ತಮ್ಮ ಆರೋಗ್ಯ ಯೋಗಕ್ಷೇಮಕ್ಕೆ ಸಂಬಂಧಿಸಿದಂತೆ ತಿಳುವಳಿಕೆಯುಳ್ಳ ಮತ್ತು ಜವಾಬ್ದಾರಿಯುತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವೇದಿಕೆಯಲ್ಲಿ ಶ್ರೀಮತಿ ತೃಪ್ತಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಸುರೇಶ್ ಎನ್. ಅಧ್ಯಕ್ಷೀಯ ನುಡಿಗಳನ್ನಾಡಿದರು.
ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಚೈತ್ರಾ ಸ್ವಾಗತಿಸಿ, ಆದರ್ಶ ಕೆ.ಹೆಚ್. ವಂದಿಸಿದರು. ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.