ಬೆಳ್ತಂಗಡಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತಂತೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ| ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು. ಸ್ವಲ್ಪಹೊತ್ತು ಅರ್ಜಿದಾರರ ಪರವಕೀಲರವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿ. ಜಿಪಿ, ದ.ಕ. ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇದರೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಸೂಕ್ತ ವಿಭಾಗೀಯನ್ಯಾಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್ ರಾವ್ ಅನ್ನೂ ಪ್ರತಿವಾದಿ ಮಾಡಲಾಗಿದೆ.