ಬೆಳ್ತಂಗಡಿ: ಮೇ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆಗೆ ಹಾಗೂ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿ, ಡಿಜೆ ಹಳ್ಳಿ ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಆದಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆ ಎಂದು ಜೀವಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಶಾಸಕ ಹರೀಶ್ ಪೂಂಜರ ವಿರುದ್ಧ
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.
ಶಶಿರಾಜ್ ಶೆಟ್ಟಿ ಎಂಬಾತನ ಬಂಧನವನ್ನು ವಿರೋಧಿಸಿ, ಮೇ 20 ರಂದು, ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ, ಕಾನೂನುಬಾಹಿರವಾಗಿ, ಬೆಳ್ತಂಗಡಿ ವಿಕಾಸ ಸೌಧದ ಮುಂಭಾಗದಲ್ಲಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಮತ್ತು ಇತರರು, ಜನರನ್ನು ಗುಂಪು ಸೇರಿಸಿ, ಪ್ರತಿಭಟನಾ ಸಭೆ ನಡೆಸಿರುತ್ತಾರೆ. ಸದ್ರಿ ಪ್ರತಿಭಟನಾ ಸಭೆಯಲ್ಲಿ, ಹರೀಶ್ ಪೂಂಜರವರು, ಪ್ರಸ್ತುತ ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ, ಪೊಲೀಸರ ಕಾಲರ್ ಹಿಡಿಯಲು ಸಿದ್ದನೆಂದು ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಸಿ, ಸಾರ್ವಜನಿಕ ನೌಕರರಾದ, ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಜೀವ ಬೆದರಿಕೆ ಒಡ್ಡಿರುತ್ತಾರೆ ಹಾಗೂ ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಹೋಗದಂತೆ ತಡೆಯೊಡ್ಡಿರುತ್ತಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.