ಕೊಯ್ಯೂರು : “ನಾಯಕನಾಗಲು ಕಠಿಣ ಪರಿಶ್ರಮ ಪಡಬೇಕು. ಜೀವನದಲ್ಲಿ ಶಿಸ್ತು ಮತ್ತು ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಮಾತ್ರ ಸಮರ್ಥ ನಾಯಕನಾಗಲು ಸಾಧ್ಯವಿದೆ”ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮ್ಯಾನೇಜರ್ ಬಾಲಕೃಷ್ಣ ಪೂಜಾರಿ ಬಜೆಗುತ್ತು ತಿಳಿಸಿದರು.
ಅವರು ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಇಂದಿನ ಹದಿಹರೆಯದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದು ಖೇದಕರ ಸಂಗತಿ ಎಂದು ಅಭಿಪ್ರಾಯಪಟ್ಟರು. ಕೊಯ್ಯೂರು ಗ್ರಾಮಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ದಯಾಮಣಿ ದೀಪಪ್ರಜ್ವಲನೆಗೈದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಮೋಹನ ಗೌಡ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಕೊಯ್ಯೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾ ಕೃಷ್ಣ ತಚ್ಛಮೆ, ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃತಿಕ್, ಕಾರ್ಯದರ್ಶಿ ಪ್ರಜ್ಞಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಾಲಕೃಷ್ಣ ಪೂಜಾರಿ ಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿನಿಯರಾದ ಭವ್ಯ, ಪ್ರಮಿತ, ಪ್ರಜ್ಞಾ, ನಿಶ್ಮಿತಾ, ಕವಿತ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಪ್ರಾಸ್ತವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ವಂದಿಸಿದರು. ಉಪನ್ಯಾಸಕರಾದ ಮಾಯಿಲ, ಸಂತೋಷ್, ಕುಮಾರಿ ತೃಪ್ತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ಕಾರ್ಯಕ್ರಮ ನಿರ್ವಹಿಸಿದರು.