ಬೆಳ್ತಂಗಡಿ: ‘ಅಣ್ಣನ ಬಗ್ಗೆ ಭಾರೀ ಮಾತನಾಡುತ್ತೀರಾ ಎಂದು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಬಣದ 8 ಮಂದಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಕಣಿಯೂರು ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಅವರು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರವೀಣ್ ಕಣಿಯೂರಿನಲ್ಲಿ ದಿನಸಿ ಅಂಗಡಿ ಹೊಂದಿದ್ದು ಜು.28ರಂದು ಮಧ್ಯಾಹ್ನ ವ್ಯಾಪಾರದಲ್ಲಿ ನಿರತರಾಗಿದ್ದ ವೇಳೆ ರಾಧಾಕೃಷ್ಣ, ಪ್ರಜ್ವಲ್, ಕಿರಣ್ ಶಿಶಿಲ ಸಹಿತ ಐವರು ನನ್ನ ಮೇಲೆ ಏಕಾ ಏಕಿ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದಾಗ ಅಣ್ಣನ ಬಗ್ಗೆ ಭಾರೀ ಮಾತನಾಡುತ್ತೀರಾ?, ರಾಜಕೀಯ ಮಾಡುತ್ತೀರಾ?, ಮಹೇಶ್ ಶೆಟ್ಟಿ ತಿಮರೋಡಿಯವರ ಕುರಿತು ಮಾತನಾಡಿದರೆ ಜಾಗ್ರತೆ ಎಂದು ಬೆದರಿಕೆ ಹಾಕಿ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆ ನಡೆಸಿದ್ದಾರೆನ್ನಲಾದ ರಾಧಾಕೃಷ್ಣ ಗೌಡ ಕೂಡ ಉಜಿರೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಉಪ್ಪಿನಂಗಡಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಆರೋಪ ಹೊರಿಸಿ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾದ ಪ್ರವೀಣ್ ಗೌಡ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬಳಿಕ ಮಾತನಾಡಿದ ಶಾಸಕ ಹರೀಶ್ ಪೂಂಜ, ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ರಾಜ್ಯ ಅರಾಜಕತೆಯ ರಾಜ್ಯವಾಗುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರಕಾರ ದೊಂಬಿ, ಗಲಾಟೆಗಳಿಗೆ ಪ್ರಚೋದನೆ ನೀಡುತ್ತಿರುವುದನ್ನು ಉಗ್ರವಾಗಿ ಖಂಡಿಸುತ್ತೇವೆ. ಪ್ರವೀಣ್ ಮೇಲೆ ನಡೆದಿರುವ ಹಲ್ಲೆ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.
ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಪ್ರವೀಣ್ ಗೌಡ ಅವರ ಮೇಲಿನ ಮಾರಣಾಂತಿಕ ಹಲ್ಲೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಹದೆಗೆಟ್ಟಿದೆ ಎಂಬುದು ಸಾಬೀತು ಆಗಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಯಾರ್ಯಾರು ಗೂಂಡಾಗಿರಿ ಮಾಡುತ್ತಾರೋ ಅವರು ತಮ್ಮ ಬಾಲ ಬಿಚ್ಚಿ ಮತ್ತೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದರು.