ಬೆಳ್ತಂಗಡಿ: ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ಮಾನವತವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳು. ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ, ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು ನಮಗೆಲ್ಲಾ ಪ್ರೇರಣೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಆ. 20 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಳ್ತಂಗಡಿ ಶ್ರೀ ಗುರುದೇವ ವಿ.ಎಸ್.ಎಸ್.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ ತುಳಿತಕ್ಕೊಳಗಾದ ಸಮಾಜಕ್ಕೆ ಸ್ವಾಭಿಮಾನದ ಶಕ್ತಿಯನ್ನು ತುಂಬಿದವರು ಬ್ರಹ್ಮಶ್ರೀ ನಾರಾಯಣಗುರುಗಳು. ಸಂಘರ್ಷವಿಲ್ಲದ ಸಂಗ್ರಾಮವನ್ನು ಸಾರಿ, ಮಾತಿಗಿಂತ ಕೃತಿ ಶಕ್ತಿಯನ್ನು ಜಗಜ್ಜಾಹಿರು ಮಾಡಿ,ಅಸ್ಪರ್ಶತೆಯನ್ನು ಹೋಗಲಾಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು. ಸಮಾಜವನ್ನು ಒಡೆಯುವ ಕೆಲಸ ಮಾಡದೇ ಸಮಾಜವನ್ನು ಕಟ್ಟುವ ಕೆಲಸವನ್ನು ಗುರುಗಳು ಮಾಡಿದರು ಎಂದರು.
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಮಾತನಾಡಿ ಸಮಾಜದಲ್ಲಿ ಕ್ರಾಂತಿ ಮಾಡಿದ ಮಹಾಪುರುಷ,ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರುಗಳು.ಸರಕಾರ ನಾರಾಯಣ ಗುರು ಜಯಂತಿ ಆಚರಣೆ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.
ಬೆಳ್ತಂಗಡಿ ಉಪ ತಹಿಶೀಲ್ದಾರ್ ಶ್ರೀಮತಿ ಜಯ ಉಪಸ್ಥಿತರಿದ್ದರು.
ಬೆಳ್ತಂಗಡಿ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಹೇಮಾ ವಂದಿಸಿದರು
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.