ಬೆಳ್ತಂಗಡಿ: ಧರ್ಮಸ್ಥಳ ಪಾಂಗಾಳ ಸಮೀಪ ಹನ್ನೆರಡು ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ, ಪ್ರಕರಣದ ಮರುತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ ಹಾಗೂ ಆರೋಪಿ ಸಂತೋಷ್ ರಾವ್ ಅಕ್ರಮ ಬಂಧನಕ್ಕೆ ಪರಿಹಾರ ಕೋರಿದ್ದ ಅರ್ಜಿ ಈ ಮೂರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಚಂದಪ್ಪಗೌಡ, ಸಂತೋಷ್ ರಾವ್, ಸಿಬಿಐ ಈ ಮೂವರು ಸಲ್ಲಿಸಿದ್ದ ಅರ್ಜಿಗಳು ವಜಾಗೊಂಡಿದೆ. ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ. ಇನ್ನು ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ್ದ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದೆ.
ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ಮಕ್ಕಳ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ಆರೋಪದ ಅಡಿ ಸಂತೋಷ್ ರಾವ್ ಅವರನ್ನು ದೋಷಿ ಎಂದು ಆದೇಶಿಸಬೇಕು ಎಂದು ಕೋರಿತ್ತು.
ಇನ್ನು, ವಿಚಾರಣಾಧೀನ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.
ಮತ್ತೊಂದೆಡೆ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ದಳ ರಚಿಸಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.
2012ರ ಅಕ್ಟೋಬರ್ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ
ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್ ರಾವ್ ಎಂಬಾತನ ಬಂಧನ ಮಾಡಿದ್ದರು. ನಂತರ ಈ ಪ್ರಕರಣ ಸಿಬಿಐಗೆ ವರ್ಗಾಯಿಸಲಾಗಿದ್ದು, ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್ ರಾವ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್ ರಾವ್ ಅವರನ್ನು 2023ರ ಜೂನ್ 16ರಂದು ಖುಲಾಸೆಗೊಳಿಸಿತ್ತು.