ಉಜಿರೆ: “ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿನಿಯರಿಗೆ ಭವಿಷ್ಯದಲ್ಲಿ ಉದ್ಯೋಗಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಸ್ವ ಉದ್ಯೋಗ ಮಾಡಿಯಾದರೂ ಜೀವನ ನಿರ್ವಹಣೆ ಮಾಡಬಹುದು. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ತುಂಬಾ ಸಹಕಾರಿ” ಎಂದು ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಆಡಳಿತಾಂಗ ಕುಲಸಚಿವೆ ಡಾ. ಶಲೀಪ್ ಎ.ಪಿ. ಹೇಳಿದರು.
ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ. 11ರಂದು ಅವರು 2023-24 ನೇ ಸಾಲಿನ ಘಟಿಕೋತ್ಸವ ಹಾಗೂ 2024-25 ನೇ ಸಾಲಿನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಇತರ ಎಲ್ಲಾ ಐ.ಟಿ.ಐ. ಗಳಿಗಿಂತ ಒಂದು ವಿಭಿನ್ನ ವೈಶಿಷ್ಟ್ಯವನ್ನು ಹೊಂದಿದ್ದು, ಇಲ್ಲಿ ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನಕ್ಕೆ ಬೇಕಾಗುವ ಎಲ್ಲಾ ರೀತಿಯ ಶಿಕ್ಷಣವನ್ನು ನೀಡುತ್ತಾ ಬರಲಾಗುತ್ತಿದೆ ಎಂದು ಹೇಳಿದರು.
ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಆಡಳಿತಾಂಗ ಕುಲಸಚಿವೆ ಡಾ. ಶಲೀಪ್ ಎ.ಪಿ. ಮಾತನಾಡಿದರು.
ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ, ರುಡ್‌ಸೆಟ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಜೇಯ ಅವರು, “ಎಲ್ಲಾ ಮೂಲಸೌಕರ್ಯ ಹೊಂದಿರುವುದರಿಂದ ಈ ಸಂಸ್ಥೆಯು ಉತ್ತಮ ದಾಖಲಾತಿಯನ್ನು ಹೊಂದಿದೆ. ಜೊತೆಗೆ ಉತ್ತಮ ಫಲಿತಾಂಶ ಹಾಗೂ ಎಲ್ಲಾ ವಿದ್ಯಾರ್ಥಿನಿಯರಿಗೆ ವಿವಿಧ ಪ್ರತಿಷ್ಠಿತ ಕಂಪೆನಿಗಳಲ್ಲಿ ಅಪ್ರಂಟಿಶಿಪ್ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಅಷ್ಟೇ ಅಲ್ಲದೆ, ಈ ಸಂಸ್ಥೆಯ ವಿದ್ಯಾರ್ಥಿನಿಯರು ತರಬೇತಿ ಬಳಿಕ ನಮ್ಮ ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದು, ಈ ಸಂಸ್ಥೆಯು ನಮ್ಮೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಎಜುಕೇಶನಲ್ ಸೊಟೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯ ಕುಮಾರ್ ಅವರು ಮಾತನಾಡಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು, ಐ.ಟಿ.ಐ. ಶಿಕ್ಷಣ ಸಂಸ್ಥೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿನಿಯರು ಸ್ವಾವಲಂಬಿಯಾಗಿ ಬದುಕಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಅದಕ್ಕಾಗಿ ಕಡಿಮೆ ವೆಚ್ಚದಲ್ಲಿ ಐ.ಟಿ.ಐ.ಯಲ್ಲಿ ಉತ್ತಮ ಶಿಕ್ಷಣವನ್ನು ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದರು.
ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಪ್ರಸ್ತಾವಿಸಿ, ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿ ಸುಮಂಗಲಾ ಜೈನ್ ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.