ಧಮ೯ಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.
ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು , ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು , ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು , ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ
ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು , ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯ ವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು , ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯ ವಾಸಿಗಳಿಗೆ ಪ್ರಾಶಸ್ತ್ಯ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.