ಬೆಂಗಳೂರು: ನಿನ್ನೆ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಜ.9ರಂದು ಅವರನ್ನು ಎನ್‌ಐಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ನಂತರ 6 ನಕ್ಸಲರನ್ನು ಬಿಗಿ ಪೊಲೀಸ್ ಬಂಧೋಬಸ್ತ್ ನಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು.
ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೂತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆರು ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.