ಉಜಿರೆ: ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಎಂಬ ವಿಷಯದ ಮೇಲೆ ಉಜಿರೆ ಶ್ರೀ ಧ.ಮ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗವು ಜನವರಿ 17 ,18 ರಂದು ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಏರ್ಪಡಿಸಿದ್ದು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಕುಮಾರ ಹೆಗ್ಡೆ ಹೇಳಿದರು.
ಅವರು ಜ.13 ರಂದು ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಜ.17ರಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಆಸ್ಟ್ರೇಲಿಯಾ ನ್ಯಾಷನಲ್ ವಿಶ್ವವಿದ್ಯಾಲಯದ ಡಾ.ಕಾಲಿಯಪ್ಪ ಕಲಿರಜನ್ ಹಾಗೂ ಶ್ರೀ ಧ.ಮ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕರ್ನಾಟಕದ ಓಂಬಡ್ಸ್ ಮನ್ ಆಗಿರುವ ಡಾ.ಬಾಲು ಕೆಂಚಪ್ಪ, ಉದ್ಯಮಿ ಶಶಿಧರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿವಿ ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ರಾಜ್ಯ ಯೋಜನಾ ಆಯೋಗದ ಸದಸ್ಯ ಡಾ.ಜಿ.ವಿ.ಜೋಷಿ, ಮೈಸೂರು ಎಸ್.ಡಿ.ಎಂ ಮ್ಯಾನೇಜ್‌ಮೆಂಟ್ ಸಂಸ್ಥೆಯ ಡಾ.ವೆಂಕಟರಾಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ನವದೆಹಲಿಯ ಜೆ.ಎನ್.ಯು ಸಂಸ್ಥೆಯ ಡಾ.ರಮೇಶ್ ಸಾಲಿಯಾನ್, ನಿಟ್ಟೆ ವಿವಿಯ ಡಾ.ಎ.ಪಿ.ಆಚಾರ್, ಶಿವಮೊಗ್ಗದ ಅರೆಕಾ ಟೀ ಸಂಸ್ಥೆಯ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿವೇದನ್ ನೆಂಪೆ ಹಾಗೂ ನಿಡ್ಲೆ ಅಗ್ರೀ ಲೀಫ್ ಸಂಸ್ಥೆಯ ಸಹ ಸಂಸ್ಥಾಪಕ ಆತಿಶ್ಯ ಜೈನ್ ಮೊದಲಾದ ವಿದ್ವಾಂಸರು ವಿಚಾರ ಸಂಕಿರಣದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಬೆಂಗಳೂರಿನ ಐ.ಎಸ್.ಇ.ಸಿ ಸಂಸ್ಥೆಯ ಪ್ರೊ.ಎಸ್.ಮಹದೇಶ್ವರನ್, ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಜಯಕುಮಾರ್ ಶೆಟ್ಟಿ, ಮೈಸೂರಿನ ಜೆ.ಎಸ್.ಎಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಕೇಶ್ ಟಿ.ಎಸ್ ಅವರು ಸಂಶೋಧನಾ ಪ್ರಬಂಧ ಮಂಡನೆಯ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಜ.18 ರಂದು ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಅಸೆಟ್ ಮೊನಿಟೈಜೇಷನ್ ತಜ್ಞ ಸಮಿತಿ ಸದಸ್ಯ ಬೆಂಗಳೂರಿನ ಪ್ರೊ.ಕೃಷ್ಣರಾಜ್ ಸಮಾರೋಪ ಭಾಷಣ ಮಾಡಲಿದ್ದಾರೆ. ಶ್ರೀ ಧ.ಮ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ಗೌರವ ಆಹ್ವಾನಿತರಾಗಿ ಉಪಸ್ಥಿತರಿರುವರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧೆಡೆಯ 40ಕ್ಕೂ ಅಧಿಕ ಸಂಶೋಧನಾನಿರತರು ಈ ಸಂದರ್ಭದಲ್ಲಿ ಪ್ರಬಂಧ ಮಂಡಿಸಲಿದ್ದಾರೆ. ದೇಶದೆಲ್ಲೆಡೆಯಿಂದ ಬಹುಸಂಖ್ಯೆಯಲ್ಲಿ ಸಂಶೋಧನಾರ್ಥಿಗಳು ಭಾಗವಹಿಸಲಿದ್ದಾರೆ.
ಕಳೆದ ಒಂದು ತಿಂಗಳೀಚೆ ಕಾಲೇಜಿನ ರಾಜ್ಯಶಾಸ್ತ್ರ ಹಾಗೂ ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗವು ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಯಶಸ್ವಿಯಾಗಿ ಪೂರೈಸಿದ್ದು ಸ್ನಾತಕೋತ್ತರ ವಾಣಿಜ್ಯ ವಿಭಾಗವೂ ಕೂಡಾ ಇತ್ತೀಚೆಗೆ ಅಂತರರಾಷ್ಟ್ರೀಯ ಮಟ್ಟದ ಫ್ಯಾಕಲ್ಟಿ ಡೆವಲೆಪ್ ಮೆಂಟ್ ಪ್ರೋಗ್ರಾಮ್ ಅನ್ನು ಯಶಸ್ವಿಯಾಗಿ ಸಂಘಟಿಸಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಭಾಗದ ಮುಖ್ಯಸ್ಥರಾದ ಡಾ.ಗಣರಾಜ್ , ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ.ಮಹೇಶ್ ಶೆಟ್ಟಿ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಉಪಸ್ಥಿತರಿದ್ದರು.