ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ‘ಸಂಸದ ಕ್ಯಾ। ಬ್ರಿಜೇಶ್ ಚೌಟರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಕಾರಣ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯ ಸಮ್ಮತವಲ್ಲದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ, ನಿಯಂತ್ರಣವಿಲ್ಲದೆ ಆಮದಾಗುತ್ತಿರುವ ಅಡಿಕೆ ಉತ್ಪನ್ನಗಳ ಮೇಲೆ ನಿಗಾ ವಹಿಸುವ ಮೂಲಕ ಇಲ್ಲಿನ ಅಡಿಕೆಗೆ ಸೂಕ್ತ ಮಾರುಕಟ್ಟೆದರ ದೊರೆಯಲು ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಅಡಿಕೆ ಬೆಳೆಗೆ ಇತ್ತೀಚಿನ ವರ್ಷಗಳಲ್ಲಿ ಕೊಳೆರೋಗ ಹಾಗೂ ಎಲೆಚುಕ್ಕಿ ಸಮಸ್ಯೆ ಹೆಚ್ಚಾಗಿರುವುದರಿಂದ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಕಾರಣಕ್ಕೆ ಜಿಲ್ಲೆಯಲ್ಲಿ ಅಡಿಕೆಗೆ ಕಾಫಿಯನ್ನು ಪರ್ಯಾಯ ಬೆಳೆಯಾಗಿ ಬೆಳೆಸುವಲ್ಲಿ ರೈತರನ್ನು ಉತ್ತೇಜಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರು ಸಚಿವರನ್ನು ಕೋರಿದ್ದಾರೆ. ಸಂಸದರ ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ.