37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನೆರಿಯ ಗ್ರಾಮದ ಗೋಪಾಲ ಗೌಡ ಯಾನೆ ಗೋಪಾಲಕೃಷ್ಣ ಗೌಡ, ಮಂಗಳೂರಿನ ಕುಡುಪು ಪಾಲ್ಡನೆಯ ಎ.ದಮಯಂತಿ, ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ವಸಂತ ಗೌಡ ಯಾನೆ ರಾಮಣ್ಣ ಗೌಡ, ನೆರಿಯ ಗ್ರಾಮದ ಪುಷ್ಪಲತಾ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.

ಆರೋಪಿ ಗೋಪಾಲ ಗೌಡನಿಗೆ 3 ವರ್ಷಗಳ ಕಾಲ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ ಹಾಗೂ ದಂಡ ತೆರಲು ವಿಫಲವಾದಲ್ಲಿ ಮತ್ತೆ 6 ತಿಂಗಳ ಸಾದಾ ಸಜೆ, ಆರೋಪಿಗಳಾದ ದಮಯಂತಿ, ವಸಂತ ಗೌಡ, ಪುಷ್ಪಲತಾರಿಗೆ 2 ವರ್ಷ ಗಳ ಶಿಕ್ಷೆ ಮತ್ತು ತಲಾ 15 ಸಾವಿರ ರೂ. ದಂಡ ಹಾಗೂ ದಂಡ ತೆರಲು ವಿಫಲವಾದಲ್ಲಿ ಮತ್ತೆ 3 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿದೆ. ಐಪಿಸಿ ಸೆಕ್ಷನ್ 506ರ ಅಡಿ ನಾಲ್ಕು ಮಂದಿ ಆರೋಪಿಗಳಿಗೆ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ತೀರ್ಪು ನೀಡಿದ್ದಾರೆ. ದಂಡದ ಮೊತ್ತ 1.45 ಲಕ್ಷ ರೂ.ವನ್ನು ಗಾಯಾಳು ಸುಂದರ ಮಲೆಕುಡಿಯ ಅವರಿಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ.

ಘಟನೆಯ ವಿವರ: 2015ರ ಜು. 26ರಂದು ಸಂಜೆ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿನ ಜಮೀನಿನಲ್ಲಿದ್ದ ಕಾಡನ್ನು ರೇವತಿ ಮತ್ತು ಬಿ.ಎ. ಸುಂದರ ಮಲೆಕುಡಿಯ ಅವರು ಮಕ್ಕಳಾದ ಪೂರ್ಣೇಶ್ ಮತ್ತು ಪೂರ್ಣಿಮಾರೊಂದಿಗೆ ಕಡಿಯುತ್ತಿದ್ದಾಗ ಆರೋಪಿಗಳು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ಧದಿಂದ ಬೈದು ಕಳೆ ಕತ್ತರಿಸುವ ಯಂತ್ರದಿಂದ ಸುಂದರ ಮಲೆಕುಡಿಯರ ಕೈಬೆರಳುಗಳನ್ನು ತುಂಡರಿಸಿ ಗಂಭೀರ ಗಾಯಗೊಳಿಸಿದ್ದರು. ಬಳಿಕ ಪರಾರಿಯಾಗಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಬಂಟ್ವಾಳ ಉಪವಿಭಾಗದ ಅಂದಿನ ಡಿವೈಎಸ್ಪಿ ರಾಹುಲ್ ಕುಮಾರ್ ತನಿಖೆ ನಡೆಸಿದ್ದರು. ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ನಮ್ರತ್ ಭಾನು ಮತ್ತು ಎ.ಜೆ. ಆಸ್ಪತ್ರೆಯ ವೈದ್ಯ ಡಾ. ದಿನೇಶ್ ಕದಮ್, ಫೊರೆನ್ಸಿಕ್ ಲ್ಯಾಬ್‌ನ ಡಿಎನ್‌ಎ ವಿಭಾಗದ ತಜ್ಞೆ ಡಾ. ಶಹನಾಝ್ ಫಾತಿಮಾ ಸಹಿತ 29 ಮಂದಿ ಸರಕಾರದ ಪರವಾಗಿ ಸಾಕ್ಷಿ ನುಡಿದಿದ್ದರು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.

Related posts

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya
error: Content is protected !!