ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.
ಅವರು ಬೆಂಗಳೂರಿನಲ್ಲಿ ಮಾ.4 ರಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು , ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.