ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ನಾನಾ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಮೇ 19ರ ತಡ ರಾತ್ರಿಯಿಂದ ಮಳೆ ಸುರಿದಿದೆ. ಇನ್ನೂ ಮೇ 20 ರಂದು ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಬಂಟ್ವಾಳ, ಸುಳ್ಯ, ಪುತ್ತೂರು, ತಾಲೂಕು ಸೇರಿದ್ದಂತೆ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಮಳೆಯಾಗಿದೆ.
ಆರೆಂಜ್ ಅಲರ್ಟ್ ಘೋಷಣೆ:
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 21ರಿಂದ 23 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ದೋಣಿಗಳು ದಡ ಸೇರುವಂತೆ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸೂಚನೆ ನೀಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳಬಾರದು ಎಂದು ತಿಳಿಸಿದೆ.
ಬೆಳಗ್ಗೆ ಮಳೆ ಸುರಿದ ಪರಿಣಾಮ ವಿದ್ಯಾರ್ಥಿಗಳು ಉದ್ಯೋಗಿಗಳು ಮಳೆಗೆ ಒದ್ದೆಯಾದ ದೃಶ್ಯ ಕಂಡು ಬಂತು. ರಸ್ತೆಯಲ್ಲಿ ಮಳೆಯ ನೀರು ಚರಂಡಿ ವ್ಯವಸ್ಥೆ ಇಲ್ಲದೆ ಹರಿಯಿತು. ಇನ್ನೇನು ಕೆಲವು ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗಲಿದ್ದು ಸಂಬಂಧಪಟ್ಟ ಇಲಾಖೆಗಳು ಚರಂಡಿ ದುರಸ್ತಿಗೊಳಿಸಬೇಕು ಎಂಬುವುದು ಸಾರ್ವಜನಿಕರ ಒತ್ತಾಯ.