ಬೆಳ್ತಂಗಡಿ: ವಿಧಾನಸಭಾ ಅಧಿವೇಶನದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಮರಳಿನ ತೀವ್ರ ಅಭಾವದ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರ ಗಮನ ಸೆಳೆದರು.
ಚುಕ್ಕೆ ಗುರುತಿನ ಪ್ರಶ್ನೆ ಸಂ.135 ಮೂಲಕ ವಿಷಯ ಪ್ರಸ್ತಾಪಿಸಿದ ಅವರು, ಸರ್ಕಾರವು 2019ರಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಕಟ್ಟಡ ನಿರ್ಮಾಣ ಮಾಡುವವರಿಗೆ ಸ್ಥಳೀಯ ಮೂಲಗಳಿಂದ ಮರಳು ತೆಗೆಯಲು ಸರಳ ರೀತಿಯಲ್ಲಿ ಪರವಾನಿಗೆ ನೀಡುವ ಆದೇಶವನ್ನು ಜಾರಿಗೆ ತಂದಿದ್ದರೂ ಸಹ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಆದೇಶ ಸಮರ್ಪಕವಾಗಿ ಜಾರಿಗೆ ಬಂದಿಲ್ಲ ಎಂದು ಪ್ರಶ್ನಿಸಿದರು.
ಸಚಿವರು ನೀಡಿದ ಉತ್ತರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ ಸಂಬಂಧಪಟ್ಟ ಗ್ರಾಮ ಪಂಚಾಯತಿಗಳಿಗೆ ಮರಳು ತೆಗೆದು ವಿಲೇವಾರಿ ಮಾಡಲು ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಈ ಪ್ರದೇಶಗಳಲ್ಲಿ ಇನ್ನೂ ಕಾರ್ಯಾರಂಭವಾಗಿಲ್ಲ ಎಂದು ಶಾಸಕರು ತಿಳಿಸಿದ್ದಾರೆ.
ಮರಳಿನ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಒಂದು ಲೋಡ್ ಮರಳಿನ ದರ ರೂ.20 ರಿಂದ ರೂ.21 ಸಾವಿರದವರೆಗೆ ಏರಿಕೆಯಾಗಿ ಸಾಮಾನ್ಯ ಜನರಿಗೆ ಮನೆ ನಿರ್ಮಾಣ ಮಾಡಿಕೊಳ್ಳುವುದು ಕಷ್ಟಕರವಾಗಿದೆ ಎಂದು ಅವರು ಹೇಳಿದರು. ಜೊತೆಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಕೆಂಪುಕಲ್ಲಿನ ದರವೂ ರೂ.60 ರಿಂದ ರೂ.65 ಸಾವಿರದವರೆಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಗುರುತಿಸಲಾದ ಕೆಲವು ಮರಳು ನಿಕ್ಷೇಪ ಪ್ರದೇಶಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಸಹ ಇವತ್ತಿನವರೆಗೆ ಮರಳು ತೆಗೆಯುವ ಕಾರ್ಯ ಆರಂಭವಾಗಿಲ್ಲ ಎಂದು ಅವರು ಹೇಳಿದರು.
ಇನ್ನೂ ಕೆಲವು ತಿಂಗಳಲ್ಲೇ ಮಳೆಗಾಲ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸರ್ಕಾರವು ತಕ್ಷಣ ಕ್ರಮ ಕೈಗೊಂಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮರಳಿನ ಸಮಸ್ಯೆಗೆ ಸೂಕ್ತ ಹಾಗೂ ಶಾಶ್ವತ ಪರಿಹಾರ ನೀಡಬೇಕು ಎಂದು ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.












