
ಉಜಿರೆ: ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸೇವಾ ನಿವೃತ್ತಿಯಾಗುತ್ತಿರುವ ಪ್ರಕಾಶ್ ಶೆಟ್ಟಿ ನೊಚ್ಚ ಅವರನ್ನು ಉಜಿರೆ ನಾಗರಿಕರ ವತಿಯಿಂದ ಅಭಿನಂದಿಸುವ ‘ಪ್ರಕಾಶಾಭಿನಂದನಮ್’ ಕಾರ್ಯಕ್ರಮ ಸೆ. 30ರಂದು ಬೆಳಿಗ್ಗೆ 10 ಗಂಟೆಗೆ ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ ಎಂದು ನೊಚ್ಚ ಪ್ರಕಾಶ ಶೆಟ್ಟಿ ಅಭಿನಂದನ ಸಮಿತಿ ಸಂಚಾಲಕ ರಘುರಾಮ ಶೆಟ್ಟಿ ಹೇಳಿದರು.
ಅವರು ಸೆವ 26ರಂದು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ವಿಧಾನಸಭೆಯ ಕರ್ತವ್ಯಧಿಕಾರಿ ಡಾ. ಕೆ. ಎನ್. ವಿಜಯಪ್ರಕಾಶ ಅವರು ‘ಪ್ರಕಾಶ ಪರ್ವ’ ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ.
ಖ್ಯಾತ ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಹಾಗೂ ಉಜಿರೆ ವರ್ತಕರ ಸಂಘದ ಅಧ್ಯಕ್ಷ ಬಿ. ಎಸ್. ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಉಜಿರೆಯ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಅಭಿನಂದನಾ ಮಾತುಗಳನ್ನಾಡಲಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಪ್ರಕಾಶ್ ಶೆಟ್ಟಿ ನೊಚ್ಚ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಸ್ಥಳೀಯ ಆಡಳಿತಕ್ಕೆ ಸಂಬಂಧಿಸಿದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕರ್ತವ್ಯನಿಷ್ಠೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರ ಸೇವೆಯನ್ನು ಸ್ಮರಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಗಣ್ಯರು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಪಂಚಾಯತ್ ಪ್ರತಿನಿಧಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು..ಸಮಿತಿ ಸದಸ್ಯ ಜಯಂತ್ ಶೆಟ್ಟಿ ಉಪಸ್ಥಿತರಿದ್ದರು.












