24.2 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರ್ಕಾರಿ ಶಾಲೆಯನ್ನು ದತ್ತು ಸ್ವೀಕರಿಸಿದ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕ

ಉಜಿರೆ : “ವ್ಯಸನ ಮುಕ್ತ ಹಾಗೂ ಕ್ಷಯ ಮುಕ್ತ ಯುವಜನತೆ” ಎಂಬ ಆಶಯದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಲ್ಮಂಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯನ್ನು ದತ್ತು ಸ್ವೀಕರಿಸುವ ಕಾರ್ಯಕ್ರಮವು ಅ. 2ರಂದು ಕಲ್ಮಂಜ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಮಂಜ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ವಿನೋದ್ ಕುಮಾರ್ ಕೆ. ಮಾತನಾಡಿ, ಶಾಲೆಯಲ್ಲಿ ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸದ ವಿಚಾರ ಎಂದರು. ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಅವರು ಆರೋಗ್ಯವಂತರಾಗಿ, ಉತ್ತಮ ಚಿಂತನೆ ಮತ್ತು ಮೌಲ್ಯಗಳೊಂದಿಗೆ ಬೆಳೆಯಬೇಕು. ವ್ಯಸನಗಳಿಂದ ದೂರವಿದ್ದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲೆಯನ್ನು ದತ್ತು ಸ್ವೀಕರಿಸಿರುವ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಕಾರ್ಯವನ್ನು ಶ್ಲಾಘಿಸಿ, ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಕಲ್ಮಂಜ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಮಾತನಾಡಿ, ಶಾಲೆಯನ್ನು ದತ್ತು ಸ್ವೀಕರಿಸುವುದು ಕೇವಲ ಒಂದು ಕಾರ್ಯಕ್ರಮಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸುವ ಮಹತ್ವದ ಪ್ರಯತ್ನವಾಗಿದೆ ಎಂದರು. ಎನ್‌ಎಸ್‌ಎಸ್ ಸ್ವಯಂಸೇವಕರು ಶಾಲೆಯೊಂದಿಗೆ ಕೈಜೋಡಿಸಿರುವುದು ಸಂತಸದ ಸಂಗತಿಯಾಗಿದ್ದು, ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉತ್ತಮ ಪ್ರೇರಣೆಯಾಗಿ, ಶಾಲೆಯ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಿ ಎಂದು ಆಶಿಸಿದರು.

ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ. ಮಾಲಿನಿ ಅಂಚನ್ ಮಾತನಾಡಿ, ಎನ್‌ಎಸ್‌ಎಸ್‌ನ ವಿವಿಧ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ. ಶಾಲೆಯನ್ನು ದತ್ತು ಸ್ವೀಕರಿಸುವ ಮೂಲಕ ಅಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ವಿವಿಧ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವ ನಿಟ್ಟಿನಲ್ಲಿ ಈ ದತ್ತು ಸ್ವೀಕಾರ ಕಾರ್ಯಕ್ರಮ ಮಹತ್ವ ಪಡೆದಿದೆ. ಕಾಲೇಜಿನ ಎನ್‌ಎಸ್‌ಎಸ್ ಸ್ವಯಂಸೇವಕರಲ್ಲಿ ಸಾಮಾಜಿಕ ಕಾಳಜಿ ಮತ್ತು ಸೇವಾ ಮನೋಭಾವವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಶಾಲಾ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ ಹಾಗೂ ವ್ಯಸನಮುಕ್ತ ಬದುಕಿನ ಕುರಿತು ಜಾಗೃತಿ ಮೂಡಿಸುವ ಉದ್ದೇಶವನ್ನು ಕಾರ್ಯಕ್ರಮ ಹೊಂದಿತ್ತು.

ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಂಜದ ಪ್ರಭಾರ ಮುಖ್ಯ ಶಿಕ್ಷಕಿ ಶೀಲಾವತಿ ಕೆ., ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷ ಚಿದಾನಂದ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಮಾಲಿನಿ ಅಂಚನ್ ಹಾಗೂ ಡಾ. ಸುಧೀರ್ ಕೆ.ವಿ., ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

ಹೇಮಲತಾ ಸ್ವಾಗತಿಸಿದರು. ಎನ್‌ಎಸ್‌ಎಸ್ ಸ್ವಯಂಸೇವಕಿ ಹರ್ಷಿತ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೆಕ್ಕಾರು: ಇಬ್ಬನಿ ಸಂಜೀವಿನಿ ಒಕ್ಕೂಟದ ಮಲ್ಲಿಗೆ ಕೃಷಿ ಮತ್ತು ತರಕಾರಿ ಕೃಷಿಯ ತರಬೇತಿ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!