ಬೆಳ್ತಂಗಡಿ: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು, ಏಳು ಅಂಕದ ಕೋಳಿಗಳು ಸೇರಿದಂತೆ ವಾಹನಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಅ. 18ರಂದು ಮಧ್ಯಾಹ್ನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸಲಾಗುತ್ತಿದೆ ಎಂಬ ಮಾಹಿತಿ ವೇಣೂರು ಪೊಲೀಸ್ ಠಾಣೆಯ ಪಿಎಸ್ ಐ ಅಕ್ಷಯ ಡವಗಿ ಅವರಿಗೆ ಲಭಿಸಿತ್ತು. ಈ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿರುವುದು ದೃಢಪಟ್ಟಿದೆ.
ಪೊಲೀಸರು ದಾಳಿ ನಡೆಸಿದಾಗ ಅಲ್ಲಿದ್ದವರು ಓಡಿಹೋಗಲು ಯತ್ನಿಸಿದ್ದು, ಅವರಲ್ಲಿ ನಾಲ್ವರನ್ನು ಹಿಡಿದು ವಿಚಾರಣೆ ನಡೆಸಿದಾಗ ಮೋಹನ ಗೌಡ (45), ದಿನೇಶ್ (45), ಪ್ರಶಾಂತ (35) ಹಾಗೂ ಧೀರಜ್ ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಏಳು ಅಂಕದ ಕೋಳಿಗಳು, ಮೂರು ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋರಿಕ್ಷಾವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.












