ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜು ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ವೇದಿಕೆ ಕಲ್ಪಿಸುವ VANI VIBES 2026 ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರು ಹಾಗೂ ವಕೀಲರಾದ ಗೋಪಾಲಕೃಷ್ಣ ಗುಲ್ಲೋಡಿ ಉದ್ಘಾಟಿಸಿ ಮಾತನಾಡಿ ವಾಣಿ ಶಿಕ್ಷಣ ಸಂಸ್ಥೆ ಕೇವಲ ಅಂಕಗಳನ್ನು ಗಳಿಸಿ ಕಾಲೇಜಿನ ಪ್ರತಿಷ್ಠೆ ಹೆಚ್ಚಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಒದಗಿಸುವುದು ಸಂಸ್ಥೆಯ ಮುಖ್ಯ ಆಶಯವಾಗಿದೆ. VANI VIBES ಹಾಗೂ VANI Snacks Street ನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಬೆಳಕಿಗೆ ತರುವ ಉತ್ತಮ ಪ್ರಯತ್ನಗಳಾಗಿವೆ ಎಂದು ಹೇಳಿದರು.

ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಕೇವಲ ಮನರಂಜನೆಯ ಅವಕಾಶವಲ್ಲದೆ, ಅವರ ಭವಿಷ್ಯಕ್ಕೆ ಉಪಯುಕ್ತವಾದ ಜೀವನಾನುಭವಗಳನ್ನು ನೀಡುತ್ತವೆ. ಇಂದಿನ ಸ್ಪರ್ಧಾತ್ಮಕ ಪ್ರಪಂಚಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ತಂಡ ವಿಭಿನ್ನ ಆಲೋಚನೆಗಳೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ಸ್ಪರ್ಧೆಯಲ್ಲಿ ಗೆಲ್ಲುವ ಉತ್ಸಾಹ ಇರಲಿ, ಆದರೆ ಇತರರ ಪ್ರತಿಭೆಯನ್ನು ಗೌರವಿಸುವ ಮನೋಭಾವವೂ ಇರಲಿ. ಶಿಸ್ತು, ಸಮಯದ ಮಹತ್ವ, ಜವಾಬ್ದಾರಿ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಕಾಲೇಜು ಜೀವನವನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ, ತಮ್ಮಲ್ಲಿರುವ ಪ್ರತಿಭೆ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ. ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಶಿಕ್ಷಣ ಸಂಸ್ಥೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಆತ್ಮವಿಶ್ವಾಸ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.
ವೇದಿಕೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಹಾಗೂ ವಾಣಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಉಪನ್ಯಾಸಕಿ ದೀಕ್ಷಾ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಮಹಾಬಲ ಗೌಡ ಸ್ವಾಗತಿಸಿದರು. ಉಪನ್ಯಾಸಕಿ ಹೇಮಲತಾ ನವೀನ್ ವಂದಿಸಿದರು.















