ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ನ.17ರಂದು ಹೊರಾಂಗಣ ವೇದಿಕೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿ ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಅಭ್ಯಾಸ್ ಕಾಲೇಜಿನ ಉಪನ್ಯಾಸಕ ಅಮಿತ್ ಕುಮಾರ್ ಮಾತನಾಡಿ, ಮಕ್ಕಳ ದಿನಾಚರಣೆಯು ಮಕ್ಕಳಲ್ಲಿರುವ ಪ್ರತಿಭೆ, ಸೃಜನಶೀಲತೆ ಹಾಗೂ ಸುಪ್ತ ಸಾಮರ್ಥ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮಹತ್ವದ ದಿನವಾಗಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್ ಮಾತನಾಡಿ, ಮಕ್ಕಳೇ ಶಾಲೆಯ ನಿಜವಾದ ಶಕ್ತಿ ಮತ್ತು ಸಂಭ್ರಮದ ಕೇಂದ್ರಬಿಂದು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಬೆಳೆಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಕಲಿಯುತ್ತಾ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹಾರೈಸಿದರು.
ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಒಳಾಂಗಣ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಬಣ್ಣಬಣ್ಣದ ಉಡುಪುಗಳನ್ನು ಧರಿಸಿ ಅತ್ಯಂತ ಉತ್ಸಾಹ ಹಾಗೂ ಸಂತೋಷದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ನಡೆದ ವೈವಿಧ್ಯಮಯ ಮನರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.
ವೇದಿಕೆಯಲ್ಲಿ ಹಿರಿಯ ಶಿಕ್ಷಕರಾದ ಚಂದ್ರಶೇಖರ್ ಭಟ್ ಹಾಗೂ ಶಾಲಾ ನಾಯಕಿ ರಂಜಿನಾ ಬಾನು ಉಪಸ್ಥಿತರಿದ್ದರು.
ಶಿಕ್ಷಕರಾದ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು. ಅರ್ಚನಾ ಸ್ವಾಗತಿಸಿದರು. ತ್ರಿವೇಣಿ ಅತಿಥಿಗಳನ್ನು ಪರಿಚಯಿಸಿದರು. ರಂಜಿತ್ ಕುಮಾರ್ ವಂದನಾರ್ಪಣೆಗೈದರು. ಮನರಂಜನಾ ಕಾರ್ಯಕ್ರಮವನ್ನು ಸರ್ವೋತ್ತಮ ನಿರೂಪಿಸಿದರು.













