ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಧರ್ಮಸ್ಥಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದ ಜಾಗೃತಿಸೌಧದಲ್ಲಿ ನಡೆದ 2149ನೇ ರಾಜ್ಯಮಟ್ಟದ ಶಿಬಿರದ ಅಂಗವಾಗಿ ೨೮೨ನೇ ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಧರ್ಮಸ್ಥಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್. ಅವರು ಮಾತನಾಡಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಸಮಾಜದ ಒಳಿತಿಗಾಗಿ ಕೈಗೊಂಡಿರುವ ವಿವಿಧ ಸಮಾಜಮುಖಿ ಕಾರ್ಯಗಳ ಬಗ್ಗೆ ಮೆಚ್ಚುಗೆಯ ಅಭಿಪ್ರಾಯ ವ್ಯಕ್ತಪಡಿಸಿದರು.ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳು ಅನೇಕ ಕುಟುಂಬಗಳಲ್ಲಿ ಹೊಸ ಭರವಸೆ ಮೂಡಿಸುತ್ತಿವೆ. ಮದ್ಯಪಾನದಿಂದ ದೂರವಿದ್ದು, ಉತ್ತಮ ಆರೋಗ್ಯ, ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಗೌರವವನ್ನು ಕಾಪಾಡಿಕೊಳ್ಳುವ ಮೂಲಕ ಅರ್ಥಪೂರ್ಣ ಜೀವನ ನಡೆಸಬೇಕು ಎಂದು ತಿಳಿಸಿದರು. ಅಲ್ಲದೆ, ಶಿಬಿರದಲ್ಲಿ ಭಾಗವಹಿಸಿದ್ದ ೫೪ ಶಿಬಿರಾರ್ಥಿಗಳಿಗೆ ಮದ್ಯಮುಕ್ತ ಜೀವನದ ಮಹತ್ವದ ಕುರಿತು ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಮಾಧ್ಯಮ ವಿಭಾಗದ ನಿರ್ದೇಶಕರಾದ ಪ್ರದೀಪ್, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳಾದ ಮಾಧವ ಗೌಡ, ಶಿಬಿರಾಧಿಕಾರಿಗಳು, ಆರೋಗ್ಯ ಸಹಾಯಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಶಿಬಿರದ ಮೂಲಕ ಹೊಸ ಜೀವನದ ಸಂಕಲ್ಪ ಕೈಗೊಂಡ ೫೨ ಶಿಬಿರಾರ್ಥಿಗಳು ಮದ್ಯಮುಕ್ತ ಬದುಕಿನತ್ತ ದೃಢ ಹೆಜ್ಜೆಯನ್ನಿಟ್ಟು, ತಮ್ಮ ಕುಟುಂಬದ ಸಂತೋಷ ಮತ್ತು ಸಮಾಜದ ಆರೋಗ್ಯಕರ ಭವಿಷ್ಯಕ್ಕೆ ಕೈಜೋಡಿಸುವ ಆಶಯದೊಂದಿಗೆ ಸಮಾರೋಪ ಸಮಾರಂಭ ಸಂಪನ್ನಗೊAಡಿತು. ಮುಂದಿನ ಶಿಬಿರ ಡಿಸೆಂಬರ 7ರಂದು ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.













