ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ (CBSE ಸಂಯೋಜಿತ) ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಪೃಥ್ವಿ ನಿರ್ವಹಿಸಿದರು. 8ನೇ ತರಗತಿಯ ವಿದ್ಯಾರ್ಥಿ ಅಂಜನ್ ರಾಯ್ ಅವರು ಸಂವಿಧಾನ ದಿನದ ಮಹತ್ವದ ಕುರಿತು ಮಾತನಾಡಿ, ಭಾರತೀಯ ಸಂವಿಧಾನದ ಆಶಯಗಳು, ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂವಿಧಾನಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಜ್ಞಾನವನ್ನು ಪ್ರದರ್ಶಿಸಿದರು.
8ನೇ ತರಗತಿಯ ವಿದ್ಯಾರ್ಥಿ ಆಶುತೋಷ್ ಅವರು ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿಗಳು ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ ಸಂವಿಧಾನದ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಂಕಲ್ಪ ಮಾಡಿದರು.ಭಾರತದ ಸಂವಿಧಾನವು ಕೇವಲ ಕಾನೂನುಗಳ ಸಂಗ್ರಹವಲ್ಲ; ಅದು ನಮ್ಮ ಪ್ರಜಾಪ್ರಭುತ್ವದ ಬುನಾದಿ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ಮಾರ್ಗದರ್ಶಿಯಾಗಿದೆ.













